ನ್ಯೂಸ್ ನಾಟೌಟ್: ಜಾತಿ, ಧರ್ಮದ ಹೆಸರಿನಲ್ಲಿ ದೇಶದ ಜನರನ್ನು ವಿಭಜಿಸಿ, ಪುಲ್ವಾಮ ಮತ್ತು ಬಾಲಾಕೋಟ್ ದಾಳಿಗಳನ್ನು ಮುಂದಿಟ್ಟುಕೊಂಡು ಜನರ ಭಾವನೆ ಕೆರಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಜನರ ಬದುಕನ್ನು ಕಟ್ಟುವ ಕಾರ್ಯವನ್ನು ಯಾವತ್ತೂ ಮಾಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ರಾಜ್ಯವನ್ನು ಸ್ವಾರ್ಥ ರಾಜಕಾರಣಕ್ಕಾಗಿ ಹಾಳು ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಲ್ಲಿ ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಸೋಮವಾರ ಮಾತನಾಡಿದರು.ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷಗ ಸುಭದ್ರ ಆಡಳಿತ ಒದಗಿಸಿದ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ 168 ಭರವಸೆಗಳಲ್ಲಿ 159 ಭರವಸೆಗಳನ್ನು ಈಡೇರಿಸಿದೆ. ಹೆಚ್ಚುವರಿಯಾಗಿ 35 ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. 300ಕ್ಕೂ ಅಧಿಕ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಅದರಲ್ಲಿ ಒಂಬತ್ತು ಭರವಸೆಗಳನ್ನೂ ಈಡೇರಿಸಿಲ್ಲ ಎಂದರು.
ಸರ್ಕಾರದ ವಿರುದ್ಧ ಜನಾಭಿಪ್ರಾಯ ಇದೆ. ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಬಿಜೆಪಿಯ ವೈಫಲ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮನೆಗೆ ಮನೆಗೆ ತಲುಪಿಸಬೇಕು. ವಿಧಾನಸಭಾ ಚುನಾವಣೆಗೆ ಇನ್ನೂ ಏಳೆಂಟು ತಿಂಗಳುಗಳಷ್ಟೇ ಇವೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲ 13 ಸ್ಥಾನಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ನಾಯಕರು ಹಾಗೂ ಕಾರ್ಯಕರ್ತರು ಶ್ರಮ ವಹಿಸಿದರೆ ಇದು ಕಷ್ಟವೇನಲ್ಲ ಎಂದರು.