ನ್ಯೂಸ್ ನಾಟೌಟ್ : ಕೊರೊನಾ ಹೆಮ್ಮಾರಿ ಮತ್ತೆ ಹರಡುವ ಭೀತಿ ಎದುರಾಗಿದೆ. ಈ ಹಿನ್ನಲೆ ಕೇಂದ್ರವು ರಾಜ್ಯಗಳಿಗೆ ಅಲರ್ಟ್ ಆಗಿರುವಂತೆ ಸೂಚನೆಯನ್ನು ನೀಡಿದೆ.ಚೀನಾದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣ ಹಿನ್ನಲೆ ಭಾರತದಲ್ಲಿಯೂ ಸುರಕ್ಷಿತವಾಗಿರುವಂತೆ ಕೇಂದ್ರ ಸೂಚಿಸಿದೆ. ಈ ನಡುವೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಗೂ ಕೇಂದ್ರ ಸರಕಾರ ಖಡಕ್ ಸೂಚನೆ ನೀಡಿದೆ.ಕೋವಿಡ್–19 ನಿಯಮಾವಳಿಗಳನ್ನು ಪಾಲನೆ ಮಾಡಿ. ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್’ಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಿ ಆರೋಗ್ಯ ಸಚಿವರು ಈ ಸೂಚನೆ ಕೊಟ್ಟಿದ್ದಾರೆಂದು ತಿಳಿದುಬಂದಿದೆ.
ಭಾರತ್ ಜೋಡೊ ಯಾತ್ರೆ ಮುಂದುವರಿಸುವುದಾದರೆ ಇನ್ನು ಮುಂದೆ ಕೋವಿಡ್ ತಡೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಒಂದು ವೇಳೆ ಪಾಲನೆಯಾಗದಿದ್ದರೆ ಯಾತ್ರೆಯನ್ನು ನಿಲ್ಲಿಸುವುದು ಸೂಕ್ತ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ವಿಚಾರವನ್ನು ತಲೆಯಲ್ಲಿಟ್ಟುಕೊಳ್ಳಿ ಎಂದು ಪತ್ರದಲ್ಲಿ ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ.ಸದ್ಯ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಹರಿಯಾಣ ಪ್ರವೇಶಿಸಿದೆ.ಈ ವೇಳೆ ಹರಿಯಾಣದ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದರು.