ನ್ಯೂಸ್ನಾಟೌಟ್: ಹಿಂದೂ ಧರ್ಮದ ಧಾರ್ಮಿಕ ನಂಬಿಕೆಗಳಿಗೆ ಒತ್ತು ನೀಡಲು ಮತ್ತು ಹಿಂದೂ ಧರ್ಮದ ರಕ್ಷಣೆಗಾಗಿ ಆಂಧ್ರಪ್ರದೇಶದಲ್ಲಿ ಮೂರುಸಾವಿರ ಹೆಚ್ಚುವರಿ ದೇವಾಲಯಗಳನ್ನು ನಿರ್ಮಿಸುವ ಬೃಹತ್ ಯೋಜನೆ ರೂಪಿಸಲಾಗಿದೆ ಎಂದು ಆಂಧ್ರಪ್ರದೇಶ ದತ್ತಿ ಇಲಾಖೆ ಸಚಿವ ಕೊಟ್ಟು ಸತ್ಯನಾರಾಯಣ ತಿಳಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಹಳ್ಳಿಗೊಂದು ದೇವಾಲಯ ನಿರ್ಮಿಸಲು ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಸಮಾಜದ ದುರ್ಬಲ ವರ್ಗಗಳಿರುವ ಪ್ರದೇಶಗಳಲ್ಲಿ ಹಿಂದೂ ದೇವಾಲಯಗಳನ್ನು ಭಾರಿ ಸಂಖ್ಯೆಯಲ್ಲಿ ನಿರ್ಮಿಸುವ ಕಾರ್ಯ ಪ್ರಾರಂಭಿಸಲಾಗಿದೆ ಎಂದು ಸತ್ಯನಾರಾಯಣ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.
ಪ್ರಾರಂಭಿಕವಾಗಿ 1,330 ದೇವಾಲಯಗಳ ನಿರ್ಮಾಣಕ್ಕೆ ತಲಾ 10 ಲಕ್ಷ ರೂ. ಅನುದಾನವನ್ನು ತಿರುಮಲ ತಿರುಪತಿ ದೇವಸ್ಥಾನದ ಶ್ರೀ ವಾಣಿ ಟ್ರಸ್ಟ್ಗೆ ಹಂಚಿಕೆ ಮಾಡಲಾಗಿದೆ. ಇದರ ಜತೆಗೆ ಹೆಚ್ಚುವರಿಯಾಗಿ 1,465 ದೇವಸ್ಥಾನಗಳನ್ನು ನಿರ್ಮಿಸಲಾಗುವುದು. ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯಡಿ 978 ದೇವಾಲಯಗಳ ನಿರ್ಮಾಣ ಕಾರ್ಯ ತ್ವರಿತವಾಗಿ ನಡೆಯುತ್ತಿದೆ. ಪ್ರತಿ 25 ದೇವಳಗಳ ಉಸ್ತುವಾರಿಯನ್ನು ಓರ್ವ ಸಹಾಯಕ ಇಂಜಿನಿಯರ್ಗೆ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.