ನ್ಯೂಸ್ ನಾಟೌಟ್: ಇಂದು (ಮಾರ್ಚ್ 18) ಅನೇಕ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಡಿಕೇರಿಗೆ ಆಗಮಿಸಿದ್ದರು. ಈ ವೇಳೆ ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡವರ ಸಾಂಪ್ರದಾಯಿಕ ಉಡುಪು ತೊಟ್ಟು ಕಾರ್ಯಕ್ರಮ ಉದ್ಘಾಟಿಸಿದ್ದು ವಿಶೇಷವಾಗಿತ್ತು.
ಕೊಡವ ಸಂಪ್ರದಾಯದಂತೆ ಕುಪ್ಪೆಚಾಲೆ ತೊಟ್ಟು ಪೀಚೆಕತ್ತಿ ಧರಿಸಿ ಮುಖ್ಯಮಂತ್ರಿಗಳು 23ನೇ ಕೊಡವ ಕೌಟುಂಬಿಕ ಹಾಕಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಗಾಂಧಿ ಮೈದಾನದಲ್ಲಿ ಬೆಳಿಗ್ಗೆ 11.30ಕ್ಕೆ ಆರಂಭವಾಗಬೇಕಿದ್ದ ಫಲಾನುಭವಿಗಳ ಸಮ್ಮೇಳನ ಮಧ್ಯಾಹ್ನ 3 ಗಂಟೆಗೆ ಆರಂಭವಾಯಿತು.
ಸಮಾವೇಶಕ್ಕೆ ಕೊಡಗು ಜಿಲ್ಲೆಯ ಎಲ್ಲಾ ಭಾಗಗಳಿಂದ ಫಲಾನುಭವಿಗಳು ಬಂದಿದ್ದು ಕಾದು ಕಾದು ಸುಸ್ತಾದರು. ಮೈದಾನದ ಪಕ್ಕದಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂಬ ಕಾರಣಕ್ಕೆ ತಡವಾಗಿ ಬಂದೆ ಎಂದು ಮುಖ್ಯಮಂತ್ರಿಗಳು ತಮ್ಮನ್ನು ಸಮರ್ಥಿಸಿಕೊಂಡರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗಿನಲ್ಲಿ ಹೆಚ್ಚುತ್ತಿರುವ ವನ್ಯಜೀವಿ- ಮಾನವ ಸಂಘರ್ಷ ತಡೆಯಲು ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಲಾಗುವುದು. ರಸ್ತೆ ದುರಸ್ತಿ ಕಾರ್ಯವನ್ನು ಮಳೆಗಾಲ ಆರಂಭವಾಗುವುದರ ಒಳಗೆ ಮುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.