ನ್ಯೂಸ್ ನಾಟೌಟ್: ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಎರಡು ಪಟ್ಟು ಹೆಚ್ಚು ಲಾಭ ಪಡೆಯಬಹುದು ಎಂದು ಸಾರ್ವಜನಿಕರಿಗೆ ನಂಬಿಸಿ ಮಂಗಳೂರಿನಲ್ಲಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಕೇರಳ ಮೂಲದ ಆರೋಪಿ ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ಚಕ್ಕರತೋಡಿ ನಿವಾಸಿ ಹಂಝಾ ಸಿ.ಟಿ. ಎಂದು ಗುರುತಿಸಲಾಗಿದೆ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೇಪಿಸಿ ತಿಂಗಳಿಗೆ ಶೇ.25ರಷ್ಟು ಲಾಭಾಂಶ ನೀಡುವ ಭರವಸೆ ನೀಡಿದ್ದ. ಅಲ್ಲದೇ ಮಂಗಳೂರಿನ ಕಣ್ಣೂರು ಪರಿಸರದ ನಿವಾಸಿಯಿಂದ ಹಾಗೂ ಇತರ ಸಾರ್ವಜನಿಕರಿಂದ ಹಣವನ್ನು ಬ್ಯಾಂಕ್ ಖಾತೆಗಳಿಗೆ ಹೂಡಿಕೆ ಮಾಡಿಸಿದ್ದ. ಆದರೆ ಲಾಭಾಂಶ ನೀಡದೆ ವಂಚನೆ ಮಾಡಿದ್ದಾನೆ. ಈ ಬಗ್ಗೆ ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗ್ಡೆ ಪೊಲೀಸ್ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ, ಪಿಎಸ್ಐ ರಾಜೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.