ನ್ಯೂಸ್ ನಾಟೌಟ್ : ಯುವಕನೋರ್ವ ಶಂಕಿತ ರೇಬಿಸ್ ಗೆ ಬಲಿಯಾದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಅಶೋಕ ಹೆಗ್ಡೆ ಅವರ ಪುತ್ರ ಪ್ರಶಾಂತ ಹೆಗ್ಡೆ(31) ಮೃತ ದುರ್ದೈವಿ.
ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತ್ ಅವರಿಗೆ ಅವರ ಮನೆಯ ನಾಯಿಮರಿ ಕಡಿದಿದ್ದು ನಾಯಿ ಮೃತ ಪಟ್ಟಿತ್ತು ಎಂದು ತಿಳಿದು ಬಂದಿದೆ. ಪ್ರಶಾಂತ್ ಅವರು ನಾಯಿ ಕಡಿದಿರುವುಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದ್ದು, ಕಳೆದೆರಡು ದಿನಗಳಿಂದ ಅವರು ತೀವ್ರ ಸಂಕಟ, ಜ್ವರದಿಂದ ಒದ್ದಾಡಿದ್ದು, ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಜ್ವರ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದರು.ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಪ್ರಶಾಂತ್ ಅವರ ಕ್ಲಿನಿಕಲ್ ಪರೀಕ್ಷೆ ವರದಿಗಳು ರೇಬಿಸ್ ಲಕ್ಷಣ ಹೊಂದಿದ್ದವು. ಆದರೆ ಅವರು ಯಾವ ಕಾರಣದಿಂದ ಮೃತರಾಗಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಅವರು ತಿಳಿಸಿದ್ದಾರೆ.