ನ್ಯೂಸ್ ನಾಟೌಟ್: ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ತಲುಪುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ, ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆ ಇದೆ. ಬೆಂಗಳೂರಿಗೆ ಯಾವುದೇ ಮಳೆಯ ಮುನ್ಸೂಚನೆಯಿಲ್ಲ. ಗರಿಷ್ಠ ಉಷ್ಣಾಂಶ 35, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಲಾಗಿದೆ.