ನ್ಯೂಸ್ ನಾಟೌಟ್ : ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಗೂ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಹೀನಾಯ ಸೋಲು ಕಂಡ ಹಿನ್ನಲೆಯಲ್ಲಿ ಈ ಬ್ಯಾನರ್ ಹಾಕಲಾಗಿತ್ತು. ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡರ ಭಾವಚಿತ್ರವಿರುವ ಬ್ಯಾನರ್ನಲ್ಲಿ “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆದು ಚಪ್ಪಲಿ ಹಾರ ಹಾಕಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಮೇ 15ರಂದು ಸಂಜೆ ನರಿಮೊಗರು ನಿವಾಸಿಗಳಾದ ವಿಶ್ವನಾಥ್ ಮತ್ತು ಮಾಧವ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದರು.
ವಿಚಾರಣೆ ವೇಳೆ ಅವರೊಂದಿಗೆ ಇನ್ನೂ ಹಲವರಿದ್ದರು ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ತಡ ರಾತ್ರಿ 7 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ.ವಶಕ್ಕೆ ಪಡೆದುಕೊಂಡಿರುವ ಆರೋಪಿಗಳನ್ನು ಜಾಮೀನಿನ ಮೇಲೆ ಕೇಸ್ ಮಾಡಿ ಬಿಡಲಾಗಿದ್ದು, ಅವರ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲಿಸಿ, ನೋಟೀಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಒಟ್ಟು 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ.