ನ್ಯೂಸ್ ನಾಟೌಟ್: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಯ ಪ್ರಬಲ ನಾಯಕ, ಮಾಜಿ ಸಚಿವ ಕೆ.ಸುಧಾಕರ್ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಗೆಲುವು ದಾಖಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ಗೆ ಇಂದು ಮಾತೃವಿಯೋಗ ಆಗಿದೆ.
ಪ್ರದೀಪ್ ಈಶ್ವರ್ ಅವರ ಸಾಕು ತಾಯಿ ರತ್ನಮ್ಮ ಅವರು ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು (ಮೇ 20) ಬೆಳಗ್ಗೆ ಪೇರೇಸಂದ್ರ ಗ್ರಾಮದಲ್ಲಿ ರತ್ಮಮ್ಮ (72) ಕೊನೆಯುಸಿರೆಳೆದಿದ್ದಾರೆ. ಸಿದ್ದರಾಮಯ್ಯ ಪ್ರಮಾಣ ವಚನ ಕ್ರಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಪ್ರದೀಪ್ ಈಶ್ವರ್ ಸಾಕು ತಾಯಿ ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ವಾಪಸ್ ಪೇರೇಸಂದ್ರ ಗ್ರಾಮಕ್ಕೆ ಮರಳಿದ್ದಾರೆ.
ಪ್ರದೀಪ್ ಈಶ್ವರ್ ಶಾಸಕರಾಗಿ ಆಯ್ಕೆಯಾದ ದಿನದಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಚನೆಯಾಗದಿದ್ದರೂ ಕ್ಷೇತ್ರದಲ್ಲಿ ಜನರ ಜತೆ ನಿಕಟ ಸಂಪರ್ಕ ಬೆಳೆಸುತ್ತಿದ್ದಾರೆ. ಮನೆಗೆ ಮನೆಗಳಿಗೆ ತೆರಳಿ ಕ್ಷೇತ್ರದ ಜನರ ಕಷ್ಟ-ಸುಖಗಳನ್ನು ಆಲಿಸುತ್ತಿದ್ದಾರೆ. ಅಲ್ಲದೆ, ಸ್ಥಳದಲ್ಲೇ ಪರಿಹಾರ ನೀಡುವ ಮೂಲಕ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಪರಿಹರಿಸುವ ಭರವಸೆ ನೀಡುವ ಮೂಲಕ ಜನನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.
ಪ್ರದೀಪ್ ಈಶ್ವರ್ ಅವರು ಮನೆ ಮನೆಗೆ ತೆರಳಿ ಜನರೊಂದಿಗೆ ಮಾತನಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.