ನ್ಯೂಸ್ ನಾಟೌಟ್ : ಬೆಂಗಳೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಶಂಕರಪುರ ಭಾಗ ಜುಲೈ 16ರಂದು ‘ಶ್ರೀ ಗುರು ಪೂಜಾ ಉತ್ಸವ’ವನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮದ (Programme) ಅಧ್ಯಕ್ಷತೆಯನ್ನು ನಾಗತಿಹಳ್ಳಿ ಚಂದ್ರಶೇಖರ್ ವಹಿಸಿಕೊಳ್ಳಲಿದ್ದಾರೆ ಎಂದೂ, ಅಖಿಲ ಭಾರತ ಗ್ರಾಮ ವಿಕಾಸ ಸಂಯೋಜಕ ಶ್ರೀಗುರುರಾಜ್ ಅಂದಿನ ಸಮಾರಂಭದಲ್ಲಿ ಭಾಗಿಯಾಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿತ್ತು. ಈ ಆಹ್ವಾನ ಪತ್ರಿಕೆ ವೈರಲ್ ಆಗಿತ್ತು.
ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) ಆರ್.ಆರ್.ಎಸ್ ಸಂಘಟನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಆರ್.ಎಸ್.ಎಸ್ ಸಂಘಟನೆಯನ್ನು ವಿರೋಧಿಸುತ್ತಾ ಬಂದಿರುವ ಬಳಗದಲ್ಲಿದ್ದ ನಾಗತಿಹಳ್ಳಿ ಚಂದ್ರಶೇಖರ್ ಅದು ಹೇಗೆ ಕಾರ್ಯಕ್ರಮವನ್ನು ಒಪ್ಪಿಕೊಂಡರು ಎನ್ನುವುದು ಕೆಲವರ ಪ್ರಶ್ನೆಯಾಗಿತ್ತು.
ನಾಗತಿಹಳ್ಳಿ ಚಂದ್ರಶೇಖರ್ ಇತ್ತೀಚೆಗೆ ಬದಲಾಗಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದರೆ, ಇನ್ನೂ ಕೆಲವರು ಅವರು ಬಿಜೆಪಿ ಮತ್ತು ಆರ್.ಎಸ್.ಎಸ್ ಜೊತೆ ಗುರುತಿಸಿಕೊಂಡು ತುಂಬಾ ದಿನವಾಗಿದೆ ಎಂದು ಹಲವರು ಕಾಮೆಂಟ್ ಮಾಡಿದ್ದರು. ನಾಗ್ತಿ ಮೇಷ್ಟ್ರ ಮೇಲೆ ನೆಗೆಟಿವ್ ಕಾಮೆಂಟ್ ಬಂದಿದ್ದೇ ಹೆಚ್ಚಿತ್ತು. ಹಾಗಾಗಿ ನಾಗತಿಹಳ್ಳಿಯವರು ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ.
ಸೋಷಿಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್, ‘ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ . ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ. ಅದು ‘ಆಕಸ್ಮಿಕ’ ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ. ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ, ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ, ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು, ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ. ಅದನ್ನೇ ಮುಂದುವರೆಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.