ನ್ಯೂಸ್ ನಾಟೌಟ್: ಜುಲೈ 8ರಂದು ಸುಳ್ಯದ ಕನ್ನಡ ಭವನದಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ 2022-23ನೇ ಸಾಲಿನಲ್ಲಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ಕನ್ನಡ ಸಾಹಿತ್ಯ -ಭಾಷೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕಳೆದ 8 ವರ್ಷಗಳಿಂದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ವಿಶೇಷ. ಹತ್ತನೇ ವಿದ್ಯಾರ್ಥಿಗಳನ್ನು ಕನ್ನಡ ಸಾಹಿತ್ಯದೆಡೆಗೆ ಸೆಳೆಯುವುದು, ಕನ್ನಡ ಪುಸ್ತಕಗಳನ್ನು ಓದಲು ಪ್ರೇರೇಪಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಈ ಕಾರ್ಯಕ್ರಮಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ಗೌರವಿಸಲಿದ್ದಾರೆ.
ಸುಳ್ಯ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಈರಯ್ಯ ಡಿ.ಎಸ್ ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷೆ ಮೀನಾಕ್ಷಿ ಗೌಡ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಸುಳ್ಯ ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ಚಂದ್ರಶೇಖರ ಪೇರಾಲು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳ ಸುಮಾರು 90ಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಸಾಧನೆಗಾಗಿ ಗೌರವ ಸ್ವೀಕರಿಸಲಿದ್ದಾರೆ.