ನ್ಯೂಸ್ ನಾಟೌಟ್: ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಸೂರತ್ ನ್ಯಾಯಾಲಯ ನೀಡಿದ ಎರಡು ವರ್ಷಗಳ ಶಿಕ್ಷೆ ಆದೇಶವನ್ನು ಗುಜರಾತ್ ಹೈಕೋರ್ಟ್ನ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ಏಕ ಪೀಠ ಇಂದು ಎತ್ತಿ ಹಿಡಿದಿದೆ.
ಈ ಹಿಂದೆ ಮಾರ್ಚ್ 23ರಂದು ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿ ವಜಾಗೊಳಿಸಿದೆ. ಇದು ರಾಹುಲ್ ಗಾಂಧಿ ಅವರಿಗೆ ಭಾರಿ ಹಿನ್ನಡೆಯಾಗಿದೆ.ಈ ತೀರ್ಪನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರಿಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯಿದೆ.
ಈ ಹಿಂದೆ ಶಿಕ್ಷೆ ಪ್ರಕಟವಾದ ಬಳಿಕ ರಾಹುಲ್ಗಾಂಧಿ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. ಆದರೆ ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. 2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.