ನ್ಯೂಸ್ ನಾಟೌಟ್: ಹಿಂದೂ, ಮುಸ್ಲಿಂ ಧರ್ಮದ ವಿಚಾರದಲ್ಲಿ ಒಂದು ಧರ್ಮವನ್ನು ತೆಗಳುವುದಕ್ಕೆಂದೇ ಕೆಲವರು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದಾರೆ. ಈ ವಿಚಾರದಿಂದ ಕರಾವಳಿಯಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಕ್ಕೆ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದೆ ಇಂತಹ ಚಟುವಟಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಆರ್ ಜೈನ್ ಎಚ್ಚರಿಕೆ ನೀಡಿದ್ದಾರೆ.
ನಗರದ ಎಲ್ಲಾ ಪೊಲೀಸ್ ಠಾಣೆಗಳ ಹಾಗೂ ಸೋಷಿಯಲ್ ಮೀಡಿಯಾ ಸೆಲ್ನಲ್ಲಿ ಧರ್ಮದ ವಿಚಾರವಾಗಿ ಪರ ಮತ್ತು ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಾಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ನಿಗಾ ವಹಿಸಲಾಗುತ್ತಿದೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅದೇ ರೀತಿ ಅಪರಾಧಗಳನ್ನು ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕುಲದೀಪ್ ಆರ್ ಜೈನ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದ ವಾಟ್ಸಪ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್ಗಳಲ್ಲಿ ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಒಳಗೊಂಡ ಸಂದೇಶಗಳು ಹರಿದಾಡುತ್ತಿರುವುದು ಕಂಡು ಬರುತ್ತಿದೆ. ಇಂತಹ ಸಂದೇಶಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ 21 ಪ್ರಕರಣಗಳು ದಾಖಲಾಗಿದ್ದು ತನಿಖೆಯಲ್ಲಿರುತ್ತದೆ.