ನ್ಯೂಸ್ ನಾಟೌಟ್: ಉಡುಪಿಯ ಖಾಸಗಿ ಅರೆ ವೈದ್ಯಕೀಯ ಕಾಲೇಜಿನ ವಾಶ್ ರೂಮ್ನಲ್ಲಿ ಮೂವರು ವಿದ್ಯಾರ್ಥಿನಿಯರು ನಡೆಸಿದ್ದಾರೆ ಎನ್ನಲಾದ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಶುಕ್ರವಾರ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಎಸ್ಪಿ ಕಚೇರಿಗೆ ಮುತ್ತಿಗೆಯನ್ನು ಹಮ್ಮಿಕೊಂಡಿದ್ದ ಪರಿಣಾಮ ಭಾರೀ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ. ಜಿಲ್ಲಾ ಬಿಜೆಪಿ ಕಚೇರಿಯಿಂದ ಹೊರಟ ಬೃಹತ್ ಪ್ರತಿಭಟನಾ ಮೆರವಣಿಗೆ ಉಡುಪಿ ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಬನ್ನಂಜೆ ಎಸ್ಪಿ ಕಚೇರಿವರೆಗೆ ಪ್ರತಿಭಟನೆ ನಡೆದಿದ್ದು, ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ಬಳಿಕ ಎಸ್ಪಿ ಕಚೇರಿ ಮುಂದೆಯೇ ಪ್ರತಿಭಟನಾ ಸಭೆ ನಡೆಸಿ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ವರದಿ ತಿಳಿಸಿದೆ.
ಉಡುಪಿಯ ಕುಂಜಿಬೆಟ್ಟು ಬಳಿಯಿರುವ ಜಿಲ್ಲಾ ಬಿಜೆಪಿ ಕಚೇರಿ ಬಳಿಯಿಂದ ಬನ್ನಂಜೆಯ ಎಸ್ಪಿ ಕಚೇರಿವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಬನ್ನಂಜೆ ನಾರಾಯಣಗುರು ವೃತ್ತದಲ್ಲಿಯೂ ಭಾರೀ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಹಾಸನ, ಶಿವಮೊಗ್ಗ, ಕಾರವಾರ, ಮಂಗಳೂರು ಸೇರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ ಸಹಿತ ಒಟ್ಟು 1000 ಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.
ಉಡುಪಿಯ ಯುವತಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಎಬಿವಿಪಿ ಸಂಘಟನೆ ಉಡುಪಿಯಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು, ತಳ್ಳಾಟ ನೂಕಾಟ ನಡೆದಿತ್ತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿತ್ತು. ಆದರೆ, ಸ್ಥಳಕ್ಕೆ ಎಸ್ಪಿ ಬರಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು.