ನ್ಯೂಸ್ ನಾಟೌಟ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(RSS) ಕಚೇರಿಯ ಗೋಡೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿರುವ ಘಟನೆ ಬುಧವಾರ ರಾತ್ರಿ ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.
ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಗುಂಡು ಹಾರಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಶಶಾಂಕ್ ಗುಪ್ತಾ, ಶಿವಾಂಕ್ ಗುಪ್ತಾ, ಮುಖೇಶ್ ಗುಪ್ತಾ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಕಚೇರಿ ಸಿಬ್ಬಂದಿ ಹಾಗೂ ಕಾರ್ಯಕರ್ತರ ಜೊತೆ ವಾಗ್ವಾದ ನಡೆಸಿದ ಆರೋಪಿಗಳು ಕೆಲ ಕ್ಷಣಗಳ ಬಳಿಕ 50 ಮಂದಿಯನ್ನು ಕರೆದುಕೊಂಡು ಬಂದು ಕಚೇರಿ ಅಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿಗಳು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಶಹಜಹಾನ್ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಬುಧವಾರ ರಾತ್ರಿ 4 ಮಂದಿ ಪಾನಮತ್ತರಾಗಿ ಆರ್ಎಸ್ಎಸ್ ಕಚೇರಿಯ ಗೋಡೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಕೂಡಲೇ ಇದನ್ನು ಗಮನಿಸಿದ ಕಚೇರಿ ಸಿಬ್ಬಂದಿ ಹಾಗೂ ಕಾರ್ಯಕರ್ತರು ಆರೋಪಿಗಳನ್ನು ಪ್ರಶ್ನಿಸಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆಹಚ್ಚಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.