ನ್ಯೂಸ್ ನಾಟೌಟ್: ಆರು ನೂರು ವರ್ಷಗಳ ಇತಿಹಾಸ ಹೊಂದಿರುವ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ದೇಶಾದ್ಯಂತ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದರೆ 2012ರಿಂದ ಕ್ಷೇತ್ರದ ಹೆಸರನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಲ್. ಎಚ್. ಮಂಜುನಾಥ್ ಹೇಳಿದರು.
ಉಜಿರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಭಕ್ತ ವೃಂದದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕೆಂದು ಕಳೆದ ಹನ್ನೊಂದು ವರ್ಷಗಳಿಂದ ನಾವು ಕೇಳುತ್ತಿದ್ದೇವೆ.ಈ ಘಟನೆಯನ್ನು ಖಂಡಿಸದವರು ಮನುಷ್ಯರೇ ಅಲ್ಲ.ಆದರೆ ಸೌಜನ್ಯ ಸಾವಿನ ವಿಚಾರ ಮುಂದಿಟ್ಟುಕೊಂಡು ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಯಾಕೆ ಅಪಮಾನ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.ನಮ್ಮ ಸಹನೆಯ ಕಟ್ಟೆ ಒಡೆದಿದೆ.ನಮ್ಮ ಹೋರಾಟ ನಿಲ್ಲದು ಎಂದು ಹೇಳಿದರು.
ನಮಗೆ ಸೌಜನ್ಯ ಕುಟುಂಬ, ಹೋರಾಟಗಾರರ ಮೇಲೆ ಯಾವುದೇ ದ್ವೇಷ ಇಲ್ಲ. ನಮ್ಮದು ಸುಳ್ಳಿನ ವಿರುದ್ಧದ ಸತ್ಯದ ಹೋರಾಟ ಎಂದರು.
ಪ್ರಕರಣ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅವಹೇಳನ ವಿಚಾರ ಪ್ರತಿಭಟನಾ ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗದ ಭಕ್ತರು ಆಗಮಿಸಿದರು. ಮಳೆಯನ್ನೂ ಲೆಕ್ಕಿಸದೇ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೈಕಾರ ಕೂಗುತ್ತ ಸೌಜನ್ಯಳಿಗೆ ನ್ಯಾಯ ಒದಗಿಸಬೇಕೆಂದು ಹೋರಾಟ ಮುಂದುವರಿಯಿತು.ಪ್ರತಿಭಟನಾ ಸಮಾವೇಶದ ಬಳಿಕ ಉಜಿರೆ ದೇವಸ್ಥಾನದಿಂದ ಉಜಿರೆ ಎಸ್.ಡಿ.ಎಂ. ಕಾಲೇಜಿನವರೆಗೆ ಭಕ್ತರು ಪ್ರತಿಭಟನಾ ಜಾಥಾ ನಡೆಸಿದರು.
ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಮಾಜಿ ಸಚಿವ ಅಭಯಚಂದ್ರ ಜೈನ್, ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ತಾಲೂಕು ಅಧ್ಯಕ್ಷ ಖಾಸಿಂ ಮಲ್ಲಿಗೆ ಮನೆ, ಮಾಜಿ ಅಧ್ಯಕ್ಷೆ ಶಾರದಾ ರೈ, ತಿಗಳ ಸಮಾಜ ರಾಜ್ಯಾಧ್ಯಕ್ಷ ಜಯರಾಜ್ ಹೊಸಕೋಟೆ, ಸುಂದರ ಗೌಡ ಇಚ್ಚಿಲ, ಎಸ್.ಕೆ.ಡಿ.ಆರ್.ಡಿ.ಪಿ. ಸಿಒಒ ಅನಿಲ್ ಕುಮಾರ್, ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಹಿತ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.