ನ್ಯೂಸ್ ನಾಟೌಟ್: ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ 25 ಗ್ರಾಂ ತೂಕದ 1.25 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಉಳ್ಳಾಲ, ಮಾಸ್ತಿಕಟ್ಟೆ ಜಂಕ್ಷನ್ ಹತ್ತಿರದ ನಿವಾಸಿ ಅಬ್ದುಲ್ ಸವಾಝ್ ಅಲಿಯಾಸ್ ಚವ್ವಾ(30) ಎಂದು ಗುರುತಿಸಲಾಗಿದೆ.
ಆರೋಪಿ ಉಳ್ಳಾಲ ಒಂಬತ್ತು ಕರೆ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಎಂಡಿಎಂಎಯನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ ಆತನಿಂದ ಎಂಡಿಎಂಎ ಮಾದಕ ವಸ್ತು, ಆತನ ವಶದಲ್ಲಿದ್ದ ಹೊಂಡಾ ಆ್ಯಕ್ಟಿವಾ ಸ್ಕೂಟರ್, 1 ಮೊಬೈಲ್ ಫೋನ್, 2120 ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,17,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಮಂದಿ ಭಾಗಿಯಾಗಿದ್ದು, ಪೊಲೀಸರು ಕಾರ್ಯಾಚರಣೆಯಿಂದ ಈ ಜಾಲದ ವ್ಯಾಪ್ತಿಯ ಸಂಪೂರ್ಣ ಮಾಹಿತಿ ಸಿಗಲಿದೆ. ಮಾದಕದ್ರವ್ಯ ಮುಕ್ತ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಳೆದ ಕೆಲವು ತಿಂಗಳಿನಿಂದ ಹಲವು ಮಾದಕ ವಸ್ತುಗಳ ಸಾಗಾಟ ಪ್ರಕರಣವನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಿ ಕ್ರಮಕೈಗೊಂಡಿದ್ದಾರೆ.