ನ್ಯೂಸ್ ನಾಟೌಟ್: ಮಹಿಷ ಉತ್ಸವದ ವೇಳೆ ಪುರಭವನದಲ್ಲಿ ಒಕ್ಕಲಿಗರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರೊ. ಕೆ ಎಸ್ ಭಗವಾನ್ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಕಲಂ 156 (ಎ) ಅಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ.ಜಿ ಗಂಗಾಧರ್, ಜಿಲ್ಲಾಧ್ಯಕ್ಷ ತೇಜಸ್ ಲೋಕೇಶ್ ಗೌಡ ಕೆಲ ದಿನಗಳ ಹಿಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಷ ಉತ್ಸವದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ ಆರೋಪದ ಮೇರೆಗೆ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ರಮೇಶ್ ಮಾಹಿತಿ ನೀಡಿದ್ದಾರೆ.
ಭಗವಾನ್ ಶ್ರೀರಾಮ ಮತ್ತು ಒಕ್ಕಲಿಗರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಸೋಮವಾರದಂದು (ಅಕ್ಟೋಬರ್ 16) ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ವತಿಯಿಂದ ಪ್ರೊ.ಕೆ.ಎಸ್ ಭಗವಾನ್ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ಕೊಡಲಾಗಿತ್ತು. ಅಕ್ಟೋಬರ್ 13 ರಂದು ಅವರು ತಮ್ಮ ಭಾಷಣದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂದು ಆರೋಪಿಸಲಾಗಿದೆ.
ಅಕ್ಟೋಬರ್ 13 ರಂದು ಮೈಸೂರಿನ ಪುರಭವನದಲ್ಲಿ ನಡೆದ ಮಹಿಷ ಉತ್ಸವ ಕಾರ್ಯಕ್ರಮದಲ್ಲಿ ತಮ್ಮ ಭಾಷಣದ ಸಂದರ್ಭ, ಹಿಂದೂ ಧರ್ಮದ ಆದಿಪುರುರುಷ ಶ್ರೀರಾಮಚಂದ್ರ ಹಾಗೂ ಒಕ್ಕಲಿಗರ ಬಗ್ಗೆ ವಿವಾದಾತ್ಮಕವಾಗಿ ಹೇಳಿಕೆಗಳನ್ನು ನೀಡಿದ್ದಾರೆಂದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಭಾಷಣ ಸಂದರ್ಭ ಕುವೆಂಪು ಅವರ ಕಾನೂರು ಹೆಗ್ಗಡತಿ ಕಾದಂಬರಿಯನ್ನೂ ಉಲ್ಲೇಖಿಸಿ ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಸಮಂಜಸವಲ್ಲ, ನಾವಿದನ್ನು ಖಂಡಿಸುತ್ತೇವೆ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ಕಿಡಿಕಾರಿತ್ತು. ಈ ಬಗ್ಗೆ ಪರ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.