ನ್ಯೂಸ್ ನಾಟೌಟ್ : ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ ಸದಸ್ಯರಾಗಿ ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಅಧ್ಯಕ್ಷ ಟಿ.ಶ್ಯಾಂ ಭಟ್ರವರು ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಅವರನ್ನು 3 ವರ್ಷಗಳ ಅವಧಿಗೆ ನೇಮಕಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದರೊಂದಿಗೆ ಹಿಮಾಚಲ ಪ್ರದೇಶ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಕೆ. ವಂಟಿಗೋಡಿ ಸೇರಿದಂತೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಮಾಜಿ ಅಧ್ಯಕ್ಷ ಟಿ.ಶ್ಯಾಂ ಭಟ್ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ.ಮೂವರನ್ನೂ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳು ಕೆಲವು ತಿಂಗಳುಗಳಿಂದ ಖಾಲಿ ಇದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಯ್ಕೆ ಸಮಿತಿ ಇತ್ತೀಚೆಗೆ ಸಭೆ ನಡೆಸಿ, ಮೂವರನ್ನು ಆಯೋಗದ ಅಧ್ಯಕ್ಷ, ಸದಸ್ಯರ ಹುದ್ದೆಗಳಿಗೆ ನೇಮಿಸುವ ತೀರ್ಮಾನ ಕೈಗೊಂಡಿತ್ತು ಎಂದು ತಿಳಿದು ಬಂದಿದೆ.
ಎಲ್. ನಾರಾಯಣಸ್ವಾಮಿ ಪರಿಚಯ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನವರಾದ ಎಲ್. ನಾರಾಯಣಸ್ವಾಮಿ, ಕಾನೂನು ಪದವಿ ಪೂರ್ಣಗೊಳಿಸಿ 1987ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. 2007ರ ಜುಲೈ 4ರಂದು ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2009ರ ಏಪ್ರಿಲ್ 17ರಿಂದ ಕಾಯಂ ನ್ಯಾಯಮೂರ್ತಿಯಾಗಿದ್ದರು. 2019ರ ಆಗಸ್ಟ್ನಲ್ಲಿ ಹಿಮಾಚಲಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಅವರು, 2021ರ ಜುಲೈ 30ರಂದು ನಿವೃತ್ತರಾಗಿದ್ದರು.