ನ್ಯೂಸ್ ನಾಟೌಟ್ : ಡಿಸೆಂಬರ್ ತಿಂಗಳ ಮಧ್ಯಭಾಗದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತು ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣಗಳಲ್ಲೂ ಏರಿಕೆ ಕಂಡಿದೆ. ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು ಆತಂಕ ಹೆಚ್ಚಿಸಿದೆ.
ಡಿಸೆಂಬರ್ 20ರಂದು ಒಟ್ಟು 300 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 3 ಕೊನೆಯುಸಿರೆಳೆದ ಘಟನೆ ಕೇರಳದಲ್ಲಿ ನಡೆದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವರದಿಯ ಪ್ರಕಾರ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2669 ಆಗಿದೆ ಎಂದು ವರದಿ ತಿಳಿಸಿದೆ.
ಕೇರಳದಲ್ಲಿ ಕೋವಿಡ್ ಉಲ್ಬಣ ಆಗುತ್ತಿರುವ ಕುರಿತು ಮಾತನಾಡಿರುವ ಆರೋಗ್ಯ ಸಚಿವೆ ವೀಣಾ ಜಾರ್ಜ್, ಸೋಂಕಿನ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಇದರ ನಿರ್ವಹಣೆಗೆ ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ ಎಮದು ಮಾಹಿತಿ ನೀಡಿದ್ದಾರೆ. ದೇಶದಲ್ಲಿ ದಾಖಲಾಗುತ್ತಿರುವ ಬಹುತೇಕ ಕೋವಿಡ್ ಪ್ರಕರಣದಲ್ಲಿ ಅತಿ ಹೆಚ್ಚು ಪ್ರಕರಣಗಳು ಕೇರಳ, ಕರ್ನಾಟಕ ಮತ್ತು ಒಡಿಸ್ಸಾದಲ್ಲಿ ದಾಖಲಾಗುತ್ತಿದೆ.
ಮಂಗಳೂರಿನಲ್ಲಿ ವೃದ್ಧನಿಗೆ ಕೋವಿಡ್ ಪಾಸಿಟಿವ್ ಪತ್ತೆಯಾಗಿದ್ದು, 82 ವರ್ಷದ ವೃದ್ಧನಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ವೃದ್ಧ ಮೂಲತಃ ಉಡುಪಿಯವರಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎನ್ನಲಾಗಿದೆ.