ನ್ಯೂಸ್ ನಾಟೌಟ್: ಶೃಂಗೇರಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದಲ್ಲಿ ಡಿಸೆಂಬರ್ 26 ರಿಂದ 28ರವರೆಗೆ ಆಯೋಜಿಸಿರುವ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ ಮತ್ತು ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಮತ್ತು ಗುರುವಂದನ ಸಮಾರಂಭ ಅದ್ಧೂರಿಯಿಂದ ಸಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಸಂಪಾದಿಸಿದ ೬೯ನೇ ಪೀಠಾಧ್ಯಕ್ಷರಾದ ಚಂದ್ರಶೇಖರನಾಥ ಮಹಾಸ್ವಾಮೀಜಿಯವರ ಸಮಗ್ರ ಪುಸ್ತಕ ಸಂಕಲನ “ಸಾಹಿತ್ಯ ತಾತ್ವಿಕ ಅನ್ವೇಷಣೆ” ಎಂಬ ಮುಖಪುಟ ಶೀರ್ಷಿಕೆ ಹೊಂದಿರುವ ಪುಸಕ್ತವನ್ನು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಬಿಡುಗೊಡೆಗೊಳಿಸಿದರು. ಶೃಂಗೇರಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಕಾರ್ಯದರ್ಶಿ ಪೂಜ್ಯ ಶ್ರೀ ಗುಣನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು, ವಿವಿಧ ಮಠಗಳ ಮಠಾಧೀಶರು, ಸ್ವಾಮೀಜಿಗಳವರು, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್, ಮಾಜಿ ಸಚಿವ ಸಿ.ಟಿ. ರವಿ , ಶಾಸಕರುಗಳಾದ ಶ್ರೀ ರಾಜೇಗೌಡ , ಅರಗ ಜ್ಞಾನೇಂದ್ರ , ಕೆ.ಎಸ್. ಆನಂದ್ , ಮಾಜಿ ಸಚಿವ ಡಿ.ಎನ್. ಜೀವರಾಜ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಚೆಗೌಡ, ಚಿಕ್ಕಮಗಳೂರು ಮತ್ತು ಶೃಂಗೇರಿ ಒಕ್ಕಲಿಗರ ಸಂಘದ ಅಧ್ಯಕ್ಷರು, ಸ್ಥಳೀಯ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.