ನ್ಯೂಸ್ ನಾಟೌಟ್: ಸಂತ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಇತರ ಮೇಲೆ ದಾಖಲಿಸಿದ ಪ್ರಕರಣ ಹಿಂಪಡೆಯಬೇಕು ಹಾಗೂ ಆರೋಪಿತ ಶಿಕ್ಷಕಿಯನ್ನು ಬಂಧಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ಸೋಮವಾರ(ಫೆ.19) ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಂಗಳೂರಿನ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯ ಸಂದರ್ಭ ಶಿಕ್ಷಕಿ ಪ್ರಭಾ ಎಂಬಾಕೆಯನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿ, ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯ ಸಂದರ್ಭ ಮಾತನಾಡಿದ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವನಾನಂದ ಮೆಂಡನ್, ಸಂತ ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ಧರ್ಮಕ್ಕೆ ಅವಹೇಳನ ಮಾಡಿ ಪಾಠ ಮಾಡಿದ್ದಾರೆ. ಶಿಕ್ಷಕಿಯನ್ನು ವಜಾಗೊಳಿಸುವಂತೆ ಪ್ರತಿಭಟನೆ ಮಾಡಿದ ಶಾಸಕರು, ಮನಪಾ ಸದಸ್ಯರು, ವಿಎಚ್ ಪಿ ಮುಖಂಡರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಪೊಲೀಸ್ ಆಯುಕ್ತರಿಗೆ ಮನವಿ ನೀಡಲು ಅವಕಾಶ ನೀಡಬೇಕು. ನೀಡದಿದರೂ ಮೆರವಣಿಗೆಯಲ್ಲಿ ಹೋಗುತ್ತೇವೆ ಎಂದು ಪ್ರತಿಭಟನಾಕಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ತಳ್ಳಿ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುತ್ತಾ ಮುನ್ನುಗ್ಗಲು ಪ್ರಯತ್ನಿಸಿದರು. ಈ ಸಂದರ್ಭ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.