ನ್ಯೂಸ್ ನಾಟೌಟ್: ಲೋಕಸಭಾ ಚುನಾವಣೆಯಲ್ಲಿ (Parliament Election) ನನ್ನ ಟಿಕೆಟ್ ತಪ್ಪಿಸಲು ಪಕ್ಷದಲ್ಲೇ ಪಿತೂರಿ (Plot to avoid ticket) ನಡೆಯುತ್ತಿದೆಯಾದರೂ ಇದರಿಂದ ನನಗೆ ಲಾಭವೇ ಆಗಲಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಶನಿವಾರ ಬೆಳಗ್ಗೆ ಮಾತನಾಡಿದ ಅವರು, ಇದೆಲ್ಲ ವರ್ಕೌಟ್ ಆಗಲ್ಲ ಎಂದಿದ್ದಾರೆ.
ʻʻಕೆಲವು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಟಿಕೆಟ್ ಕೇಳುವುದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಮ್ಮ ಕೇಂದ್ರ ಚುನಾವಣೆ ಮಂಡಳಿಯಿದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭ ಏನು ಎನ್ನುವುದರ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ʻʻಯಾರಿಗೆಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಲಿದೆ ಎಂದು ಪ್ರಧಾನಿಯವರೂ ಹೇಳಿಲ್ಲ, ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರೂ ಹೇಳಿಲ್ಲ. ಅಮಿತ್ ಶಾ ಅವರು ಕೂಡ ಹೇಳಿಲ್ಲ. ಈ ಎಲ್ಲ ಸುದ್ದಿಗಳು ಊಹಾಪೋಹ ಎನಿಸುತ್ತದೆ, ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ, ಆಗ ಸತ್ಯ ಹೊರಬರುತ್ತದೆʼʼ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಕೇಳಲು ಹೊರಟಿದೆ. ಬಿಜೆಪಿ ಯಾವ ಮಾನದಂಡ ಇಟ್ಟುಕೊಂಡು ಲೋಕಸಭೆಯಲ್ಲಿ ಮತ ಕೇಳಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಶೋಭಾ ಕರಂದ್ಲಾಜೆ ಅವರು, ಬಿಜೆಪಿಗೆ ಅಭಿವೃದ್ಧಿಯೇ ಮಾನದಂಡ, 10 ವರ್ಷಗಳ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇವೆ. ದೇಶದಲ್ಲಿ ಆಗಿರುವ ಮೂಲಸೌಕರ್ಯ ಅಭಿವೃದ್ಧಿ, ಗ್ರಾಮೀಣ ಭಾಗಕ್ಕೆ ಸಿಕ್ಕ ನೆರವು ಇದು ನಮ್ಮ ಶಕ್ತಿ ಎಂದರು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಿತೂರಿ ನಡೆಯುತ್ತಿರುವುದು ನಿಜ ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಆದರೆ, ಅದರಿಂದ ತಮಗೇ ಲಾಭವಾಗುತ್ತದೆ ಎಂದು ಅವರು ವಿವರಿಸಿದ್ದಾರೆ.ʻʻಯಾವಾಗ ವಿರೋಧ ವ್ಯಕ್ತವಾಗುತ್ತದೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರೇ ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆʼʼ ಎಂದರು ಸಚಿವೆ ಶೋಭಾ ಕರಂದ್ಲಾಜೆ.ಈಗ ನನ್ನ ಬಗ್ಗ ವಿರೋಧ ವ್ಯಕ್ತವಾಗಿರುವುದರಿಂದ ಪಕ್ಷದ ಪ್ರಮುಖರು ನನ್ನ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಾನು ಏನೇನು ಕೆಲಸ ಮಾಡಿದ್ದೇನೆ? ಕ್ಷೇತ್ರಕ್ಕಾಗಿ ಏನು ಮಾಡಿದ್ದೇನೆ, ಪಕ್ಷಕ್ಕಾಗಿ ಏನು ಮಾಡಿದ್ದೇನೆ ಎನ್ನುವುದರ ಮಾಹಿತಿ ಸಂಗ್ರಹ ಆಗಲಿದೆ. ನಾಯಕರು ಹೀಗೆ ಮಾಹಿತಿ ಕಲೆ ಹಾಕಿದಾಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನು ಎಂದು ಗೊತ್ತಾಗುತ್ತವೆ ಎಂದರು ಶೋಭಾ.
ʻʻಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಹೀಗಾಗಿಯೇ ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆʼʼ ಎಂದು ಹೇಳಿದ ಶೋಭಾ ಕರಂದ್ಲಾಜೆ ಅವರು, ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ಇದು ಎಲ್ಲರಿಗೂ ಅನ್ವಯ ಆಗುತ್ತದೆ, ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿಯೇ ಸಿಗುತ್ತದೆ ಎಂದರು.