ನ್ಯೂಸ್ ನಾಟೌಟ್: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನವನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಇಂದು (೨೬/ಮಾ.ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಹಲವು ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ನವದೆಹಲಿ ಮತ್ತು ಸೆಂಟ್ರಲ್ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರ ದಟ್ಟನೆ ಉಂಟಾಗುವ ಸಾಧ್ಯತೆ ಇದೆ ಎಂದು ದೆಹಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಪ್ರಧಾನಿ ನಿವಾಸದ ಸುತ್ತ ಈಗಾಗಲೇ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಪ್ರತಿಭಟನೆ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.
ಕೇಜ್ರಿವಾಲ್ ಬಂಧನ ವಿರೋಧಿಸಿ ಮಂಗಳವಾರ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ದೆಹಲಿ ಸಚಿವ ಗೋಪಾಲ್ ರಾಯ್ ಘೋಷಿಸಿದ್ದರು. ಜತೆಗೆ ರಾಷ್ಟ್ರವ್ಯಾಪಿ ‘ಮೆಗಾ ಪ್ರತಿಭಟನೆ’ ನಡೆಸುವುದಾಗಿಯೂ ರಾಯ್ ಹೇಳಿದ್ದರು. ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಜತೆಗೆ ಕೇಜ್ರಿವಾಲ್ ಅವರನ್ನು ಮಾರ್ಚ್ 28ರವರೆಗೆ (ಗುರುವಾರ) ಇ.ಡಿ ಕಸ್ಟಡಿ ನೀಡಿ ದೆಹಲಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು.