ನ್ಯೂಸ್ ನಾಟೌಟ್: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಹಾಗೂ ದುಬೈನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಮಂಗಳವಾರ(ಎ.16) ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬುಧವಾರ ಎ.17 ಕೂಡ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದುಬೈನಲ್ಲಿ ಕಳೆದ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಭಾರೀ ಮಳೆಯ ಪರಿಣಾಮ ಇಲ್ಲಿನ ವಿಮಾನ ನಿಲ್ದಾಣ ಜಲಾವೃತಗೊಂಡಿದ್ದು ಹತ್ತಾರು ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿತ್ತು. ನಗರದ ಪ್ರಮುಖ ರಸ್ತೆ, ಹೆದ್ದಾರಿಗಳು ಜಲಾವೃತಗೊಂಡಿದ್ದವು. ಭಾರೀ ಮಳೆಯಿಂದಾಗಿ ಸ್ಥಳೀಯ ಸರ್ಕಾರ ಮಂಗಳವಾರ ಜನರನ್ನು ತಮ್ಮ ಮನೆಗಳಲ್ಲಿ ಇರುವಂತೆ ಸೂಚನೆ ನೀಡಿತ್ತು.
ಶಾಲೆ, ಕಾಲೇಜುಗಳಿಗೆ ಆನ್ಲೈನ್ ತರಗತಿ ನಡೆಸುವಂತೆ ಹಾಗೂ ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಗಳ ನೌಕರರು ಮನೆಯಲ್ಲೇ ಕೆಲಸ ಮಾಡುವಂತೆ ಸೂಚನೆ ನೀಡಿತ್ತು. ದುಬೈ, ಅಬುಧಾಬಿ, ಶಾರ್ಜಾ, ಕತಾರ್, ಸೌದಿ ಅರೇಬಿಯಾದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.