ನ್ಯೂಸ್ ನಾಟೌಟ್: ರಾಜ್ಯದಲ್ಲಿ ಮುಂಗಾರು ಚುರುಕು ಪಡೆಯುತ್ತಿದ್ದು, ಕರಾವಳಿ, ಬೆಂಗಳೂರು ಸೇರಿದಂತೆ ರಾಜ್ಯ ಹಲವೆಡೆ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ. 23ರಿಂದ ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಜೂನ್ 25ರ ವರೆಗೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಧಾರವಾಡ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಜೂ.24ರಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ ಸೇರಿದಂತೆ ಉತ್ತರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ದ.ಕ. ಜಿಲ್ಲೆಯ ವಿವಿಧೆಡೆ ಬಿಟ್ಟು ಬಿಟ್ಟು ಮಳೆಯಾಗಿದೆ. ಕರಾವಳಿಯಲ್ಲಿ ಜೂ.22ರಂದು ಆರೆಂಜ್ ಹಾಗೂ ಜೂ.23 ಮತ್ತು 24ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.