ನ್ಯೂಸ್ ನಾಟೌಟ್ : ಕೊಡಗಿನಲ್ಲಿ ಮುಂಗಾರು ಮಳೆ ಹೆಚ್ಚಾಗಿರುವುದರಿಂದ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ, ಅಧಿಕ ಭಾರದ ಸರಕು ಸಾಗಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದುಅಪಘಾತಗಳಿಗೆ ಕಾರಣವಾಗುತ್ತಿದೆ, ಹೀಗಾಗಿ ಅಧಿಕ ಭಾರದ ಸರಕು ಸಾಗಣೆ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ.
ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಜುಲೈ, 01 ರಿಂದ ಜುಲೈ 30 ರವರೆಗೆ ಈ ಸಂಚಾರ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶಿಸಿದ್ದಾರೆ. ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು ಸಂಚರಿಸಲು ಅನುಮತಿ ನೀಡಲಾಗಿದೆ.
Click 👇