ಬೆಂಗಳೂರು: ಕೋವಿಡ್ ನಾಲ್ಕನೇ ಬರುವ ಸಾಧ್ಯತೆ ಇರುವುದರಿಂದ ಕಡ್ಡಾಯವಾಗಿ ಮಾಸ್ಕ್ ಧರಿಸುವುದೂ ಸೇರಿ ಕೆಲವು ಕಟ್ಟುನಟ್ಟಿನ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ನಿರ್ಧರಿಸಿದೆ.
ಸಭೆಯ ಬಳಿಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ರಾಜ್ಯದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳಬೇಕು. ವಿಶೇಷವಾಗಿ ಜನಜಂಗುಳಿ ಇರುವ ಕಡೆಗಳಲ್ಲಿ ಮತ್ತು ಒಳಾಂಗಣದಲ್ಲಿ ಮಾಸ್ಕ್ ಧರಿಸಬೇಕು. ಇದಕ್ಕಾಗಿ ಮಾರ್ಗಸೂಚಿ ಹೊರಡಿಸಲಾಗುವುದು. ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸುವ ಬಗ್ಗೆ ತಕ್ಷಣಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸುಧಾಕರ್ ಹೇಳಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಕೋವಿಡ ದೃಢ ಪ್ರಮಾಣ ಶೇ 1.9 ರಷ್ಟಿದೆ. ಆದ್ದರಿಂದ ಬೆಂಗಳೂರು ನಗರದಲ್ಲಿ ವಿಶೇಷ ನಿಗಾ ಇಡಲು ತೀರ್ಮಾನಿಸಲಾಗಿದೆ. ಮೇಲ್ವಿಚಾರಣೆ ಮತ್ತು ಚಿಕಿತ್ಸೆ ನೀಡುವ ಸಂಬಂಧ ಮಾರ್ಗಸೂಚಿ ಹೊರಡಿಸಲಾಗುವುದು ಎಂದರು.