ನ್ಯೂಸ್ ನಾಟೌಟ್: ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಕೊಲೆ ಪ್ರಕರಣದ ಆರೋಪಿಯು ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಸ್ನೇಹಿತ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ನಡೆಯನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ನಿನ್ನೆ ಆಗಸ್ಟ್ 12 ರಂದು ನವೀನ್ ಕುಮಾರ್ ಅನ್ನು ಭೇಟಿಯಾಗಿರುವ ಪ್ರತಾಪ್ ಸಿಂಹ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡು, ‘ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ ಆರೋಪಿ-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು, ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದೆ. ಮದ್ದೂರಿನ ಯುವ ಸ್ನೇಹಿತರೂ ಜೊತೆಗಿದ್ದರು’ ಎಂದು ಬರೆದುಕೊಂಡಿದ್ದಾರೆ.
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಯ ವಿರುದ್ಧ ಕಿಡಿಕಾರಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಪ್ರತಾಪ್ ಸಿಂಹ ಹಾಗೂ ನವೀನ್ ಕುಮಾರ್ ಫೋಟೋ ಹಂಚಿಕೊಂಡು, ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು ಎಂದು ಆಕ್ರೋಶ ಹೊರಹಾಕಿದ್ದಾರೆ.
Click