ನ್ಯೂಸ್ ನಾಟೌಟ್: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ(ಆ.21) ಹೇಳಿದ್ದಾರೆ.
ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ‘ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ’ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್.ಐ.ಟಿ ಯವರು ತನಿಖಾ ವರದಿ ನೀಡಿ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್.ಐ.ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದು ಸಿಎಂ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲದೆ ಮತ್ತೇನು ಎಂದು ಕೇಳಿದ್ದಾರೆ.
Click