ನ್ಯೂಸ್ ನಾಟೌಟ್: ಬಡ್ಡಿ ಸಾಲಕ್ಕೆ ಸಂಬಂಧಿಸಿದಂತೆ ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಮತ್ತೊಬ್ಬ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಅಕ್ರಮ ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ವಿದ್ಯಾರ್ಥಿಗಳನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವಶಕ್ಕೆ ಪಡೆದಿದ್ದಾರೆ.
ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ 25 ವಿದ್ಯಾರ್ಥಿ ದಂಧೆಕೋರರನ್ನು ಬಂಧಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಆಗಸ್ಟ್ 18ರಂದು ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿತ್ತು. 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗೆ 10ನೇ ತರಗತಿ ವಿದ್ಯಾರ್ಥಿ ಹಲ್ಲೆ ಮಾಡಿದ್ದರು. ಈಗ ನಾವು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದೇವೆ ಎಂದರು.
ವಿಚಾರಣೆ ವೇಳೆ ಕಿಡ್ನಾಪ್ ಮಾಡಿ, ವಾರದ ಬಡ್ಡಿ ಲೆಕ್ಕದ ಮೇಲೆ ಹಣಕ್ಕೆ ಬೇಡಿಕೆ ಇಟ್ಟಿರುವುದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಆರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಇಬ್ಬರು ಮೇಜರ್ ಹಾಗೂ ನಾಲ್ಕು ಜನ ಮೈನರ್ ಇದ್ದರು. ಅಪ್ರಾಪ್ತರನ್ನು ಬಾಲ ಅಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ, ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ವಿಚಾರಣೆ ನಡೆಸಿದಾಗ ಕೆಲವರು ಈ ಬಾಲಕರನ್ನು ಉಪಯೋಗಿಸಿಕೊಂಡು ಬಡ್ಡಿ ವ್ಯವಹಾರ ಮಾಡುತ್ತಿದ್ದರು. ದುಪ್ಪಟ್ಟು ಬಡ್ಡಿಗೆ ಹಣ ನೀಡಿ, ವಾಹನಗಳನ್ನು ಇಟ್ಟುಕೊಳ್ಳೋದು, ಬೆದರಿಕೆ ಹಾಕುವುದು ಸೇರಿ ಹಲವು ರೀತಿಯ ಕೃತ್ಯಗಳನ್ನು ಮಾಡುತ್ತಿರುವುದು ತಿಳಿದು ಬಂದಿದೆ. ಮುಂದುವರೆದು ಸುಮಾರು 10 ಜನರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
Click