ನ್ಯೂಸ್ ನಾಟೌಟ್: ಪ್ರತಿಷ್ಠಿತ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಘಟನೆ ರಾಜ್ಯದ ಗಡಿಭಾಗ ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿ ಗ್ರಾಮದಿಂದ ವರದಿಯಾಗಿದೆ.
ಕೂತನಹಳ್ಳಿ ಗ್ರಾಮದಲ್ಲಿರುವ ಟಾಟಾ ಕಂಪೆನಿಯಲ್ಲಿ ಈ ಅವಘಡ ಸಂಭವಿಸಿದ್ದು, ಈ ಸಂದರ್ಭ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಟಾಟಾ ಕಂಪನಿಯ ಕೆಮಿಕಲ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು,ಯಂತ್ರಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಜೀವ ಉಳಿಸಿಕೊಳ್ಳಲು ಹೊರಗೆ ಓಡಿಬಂದಿದ್ದಾರೆ.
ತಕ್ಷಣ ರಾಯಕೋಟೆ ಮತ್ತು ಡೆಂಕಣಿಕೋಟೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು. ರಾಯಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಂಪೆನಿಯಲ್ಲಿ ಮೊಬೈಲ್ ಬಿಡಿ ಭಾಗಗಳ ಉತ್ಪಾದನೆ ಮಾಡಲಾಗುತ್ತಿತ್ತು. ಕೆಮಿಕಲ್ ಘಟಕದಲ್ಲಿ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಭಾರಿ ಪ್ರಮಾಣದಲ್ಲಿ ಹೊಗೆ ತುಂಬಿಕೊಂಡಿದೆ. ಐದಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸದ್ಯ ಮೂವರು ಕಾರ್ಮಿಕರು ಅಸ್ವಸ್ಥಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.