ನ್ಯೂಸ್ ನಾಟೌಟ್: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ 18 ಮತ್ತು 19ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ 16 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಮುಂದುವರಿಸಲಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ 18ರಂದು ಆರೆಂಜ್ ಅಲರ್ಟ್ ಹಾಗೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಇರಲಿದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.
ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಮಂಗಳವಾರ 12 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಮೂಡುಬಿದರೆ 11, ಮೈಸೂರು 9, ಶ್ರೀರಂಗಪಟ್ಟಣ, ಪಾಂಡವಪುರ 8, ಮಧುಗಿರಿ, ಮಳವಳ್ಳಿ 7, ಶಿಡ್ಲಘಟ್ಟ, ತೊಂಡೇಬಾವಿ, ಭದ್ರಾವತಿ, ಸಕಲೇಶಪುರ 6, ಮಂಗಳೂರು, ನಂಜನಗೂಡು 5, ಉಡುಪಿ, ಶಿರಸಿ, ಪುತ್ತೂರು, ಬೆಳ್ತಂಗಡಿ, ತಿಪಟೂರು, ಶಿರಾ 4, ಕುಂದಾಪುರ, ಕಡೂರು, ಕೊಪ್ಪ, ಹಿರಿಯೂರು, ದೊಡ್ಡಬಳ್ಳಾಪುರ, ಹುಣಸೂರು, ಚಿಂತಾಮಣಿ, ಚಿಕ್ಕಬಳ್ಳಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.