ನ್ಯೂಸ್ ನಾಟೌಟ್: ನ್ಯೂ ಟ್ರೆಂಡಿಂಗ್ ಜೀನ್ಸ್ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದ ಯುವಕನನ್ನು ಲಾಕ್ ಮಾಡಿ ಗೋಣಿಚೀಲದ ಸೂಜಿಯಿಂದ ಆತನ ಪ್ಯಾಂಟ್ ಹೊಲಿದು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ (ನ.22ರ) ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದಾತನನ್ನು ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿಯ ಶಾಹಿಲ್ ಎಂಬಾತ ನ.21 ರಂದು ಮಧ್ಯಾಹ್ನ ಹೊಸ ಮಾದರಿಯ ಜೀನ್ಸ್ ಪ್ಯಾಂಟ್ (distressed jeans) ಧರಿಸಿ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ಸಂದರ್ಭ ಮಾರುಕಟ್ಟೆಯಲ್ಲಿದ್ದ ಪಡ್ಡೆ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು. ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದ ಯುವಕ ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದೀಗ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ. ವಿಡಿಯೋ ಮಾಡಿ ಟ್ರೋಲ್ ಮಾಡಿದ್ದರಿಂದ ಮಾನಸಿಕವಾಗಿ ನೊಂದ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಮನೆಯವರು ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ. ಘಟನೆ ಬಗ್ಗೆ ಪುಂಡರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.