ನ್ಯೂಸ್ ನಾಟೌಟ್: ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇದರ ಜೊತೆಗೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆಯ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.
ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರತರಹದ ರಕ್ತಸ್ರಾವ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಅವಶ್ಯವಿರುವ ಉಪಕರಣಗಳನ್ನು ನೀಡಲಾಗುವುದು. ನವೀನ ಡಿಜಿಟಲ್ ತಂತ್ರಜ್ಞಾನದ ಮೂಲಕ ಹೆರಿಗೆ ಸೇವೆಗಳನ್ನು ಬಲಪಡಿಸಲಾಗುವುದು. ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗಟ್ಟಲು ಹಿಂದುಳಿದ ಜಿಲ್ಲೆಗಳಲ್ಲಿ ಪೌಷ್ಟಿಕಾಂಶ ಕಿಟ್ ಗಳು, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್ ಗಳನ್ನು ವಿತರಣೆ ಮಾಡಲಾಗುವುದು ಎಂದು ಸಿಎಂ ಬಜೆಟ್ ನಲ್ಲಿ ತಿಳಿಸಿದ್ದಾರೆ.