ನ್ಯೂಸ್ ನಾಟೌಟ್ : ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ವರದಿಯಾಗಿದೆ.ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ನಲ್ಲಿ ಈ ಘಟನೆ ನಡೆದಿದೆ.
ಪುಷ್ಪಾವತಿ (30) ಮೃತರಾಗಿದ್ದು, 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಇವರ ವಿವಾಹವಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು. ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುಷ್ಪಾವತಿ ನಾಪತ್ತೆ ಆಗಿರುವ ಬಗ್ಗೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಕುಟುಂಬಸ್ಥರು ಕೇಸ್ ದಾಖಲಿಸಿದ್ದರು.
ಆರೋಪವೇನು?
ನಾನು ಮದುವೆಯಾಗಿ ಗಂಡನ ಮನೆಗೆ ಹೋದ ದಿನದಿಂದ ನನ್ನ ಗಂಡ ನನ್ನ ಜೊತೆ ಸರಿಯಾಗಿ ಸಂಸಾರ ಮಾಡದೆ, ನನ್ನಿಂದ ದೂರ ಉಳಿಯುತ್ತಿದ್ದರು. ಸಂಸಾರ ಮಾಡಬೇಕೆಂದು ಎಷ್ಟು ಪ್ರಯತ್ನ ಪಟ್ಟರು ಗಂಡ ನನ್ನ ಜೊತೆ ಸರಿಯಾಗಿ ಮಾತನಾಡುತ್ತಿರಲಿಲ್ಲ. ಈ ವಿಚಾರವನ್ನು ನಮ್ಮ ಅತ್ತೆ ಮಾವನಿಗೆ ತಿಳಿಸಿದರೆ ಎಲ್ಲಾ ಸರಿ ಹೋಗುತ್ತೆ ಸುಮ್ಮನಿರು ಎಂದು ಆರಂಭದಲ್ಲಿ ಹೇಳುತ್ತಿದ್ದರು.
ಗಂಡನಿಗೆ ನಾವು ಮಗು ಮಾಡಿಕೊಳ್ಳೋಣ ಎಂದು ಕೇಳಿದರೆ, ಈಗ ಮಗು ಬೇಡ 1-2 ವರ್ಷ ಹೋಗಲಿ ನಂತರ ಮಗು ಮಾಡಿಕೊಳ್ಳೋಣ. ಈವಾಗ ಯಾಕೆ ಅರ್ಜೆಂಟ್ ಎಂದು ನನಗೆ ಬೈಯುತ್ತಿದ್ದರು. ನನಗೆ ಅನುಮಾನ ಬಂದು, ನಿನಗೇನಾದರೂ ತೊಂದರೆ ಇದ್ದರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳೋಣ ಎಂದು ಗಂಡನಿಗೆ ತಿಳಿಸಿದ್ದೆ. ಆಗ ನನಗೆ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಅವರನ್ನು ಮುಟ್ಟಿದರೆ ಕಾಲಿನಿಂದ ನನ್ನ ಎದೆಗೆಲ್ಲ ಒದೆಯುತ್ತಿದ್ದರು. ಮಗು ಬೇಕು ಎಂದರೆ ನನ್ನ ಚಿಕ್ಕ ಮಗನ ಬಳಿ ಹೋಗು ಎಂದು ಅತ್ತೆ-ಮಾವ ಹೇಳುತ್ತಿದ್ದರು. ಮೈದುನನೂ ಅದೇ ರೀತಿ ಮಾತಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ನನ್ನ ಹೆತ್ತವರಿಗೆ ತಿಳಿಸಿದ್ದು, ಅವರು ಬಂದು ಹೇಳಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಪುಷ್ಪಾವತಿ ಆರೋಪಿಸಿದ್ದಾರೆ.













