ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಚೆಕ್ ಪೋಸ್ಟ್ಗಳಲ್ಲಿ ಸಿಸಿಟಿವಿ ಅಳವಡಿಸಿ ಕೊರೊನಾ ನಿಯಂತ್ರಣಕ್ಕೆ ಬಿಗಿಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.
ಕೊಡಗು ಜಿಲ್ಲೆ ಕೋವಿಡ್-19 ನಿರ್ವಹಣೆ ಮತ್ತು ಮಳೆ ಹಾನಿ ಪರಿಹಾರ ಕಾರ್ಯ ಕುರಿತು ಶುಕ್ರವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಾಕ್ಡೌನ್ ತೆರವುಗೊಳಿಸಿದ ನಂತರ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗಿದೆ. ಹಾಗೆಯೇ ಕೇರಳ ರಾಜ್ಯದಲ್ಲಿ 3ನೇ ಅಲೆ ಕಂಡು ಬಂದಿರುವುದರಿಂದ ಕೇರಳ ರಾಜ್ಯದಿಂದ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕೇರಳದಿಂದ ಆಗಮಿಸುವವರನ್ನು ಕೊಡಗು ಜಿಲ್ಲೆ ಪ್ರವೇಶಕ್ಕೆ ಅವಕಾಶ ನೀಡಬಾರದು. ತುರ್ತು ಕೆಲಸ ಇದ್ದವರಿಗೆ 72 ಗಂಟೆಗಳ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿದ ನೆಗೆಟಿವ್ ವರದಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು ಎಂದರು. ಸರ್ಕಾರ ಕೋವಿಡ್ ನಿಯಂತ್ರಣಕ್ಕಾಗಿ ಹಣ ನೀಡುತ್ತದೆ. ಆದರೆ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಸಚಿವರು ಕಂದಾಯ, ಪೊಲೀಸ್, ಪಂಚಾಯತ್ ರಾಜ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ಕೋವಿಡ್-19 ನಿಯಂತ್ರಿಸಬಹುದು. ಆ ನಿಟ್ಟಿನಲ್ಲಿ ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಕೋವಿಡ್-19 ಪ್ರಕರಣ ಹೆಚ್ಚಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ, ಸಂಪಾಜೆ, ತಿತಿಮತಿ ಸೇರಿದಂತೆ ವಿವಿಧ ಚೆಕ್ ಪೋಸ್ಟ್ಗಳಲ್ಲಿ ಸರಿಯಾದ ತಪಾಸಣೆ ಮಾಡುತ್ತಿಲ್ಲ ಎಂದು ದೂರಿದರು.