ನ್ಯೂಸ್ ನಾಟೌಟ್: ‘ವಿಶ್ವಗುರು ಬಸವಣ್ಣನವರ ಹೆಸರಲ್ಲೇ ಗೆದ್ದು ಬಂದು ಅಧಿಕಾರ ಹಿಡಿಯುವ ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕೆ ಮನಸ್ಸೋ ಇಚ್ಚೆ ಮಾತನಾಡಿದರೆ ಅವರ ನಾಲಗೆಯನ್ನು ಸೀಳಬೇಕಾಗುತ್ತದೆ’ ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಬೆಟ್ಟಹಳ್ಳಿ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಸಂವಿಧಾನ ಶಿಲ್ಪಿ ಬಸವಣ್ಣ ಕೊನೆಗೆ ʼಹೊಳೆಗೆ ಹಾರಿಕೊಂಡರುʼ ಎಂದು ಹೇಳಿಕೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ನಾಯಕರು ಬಸವಣ್ಣನವರ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ಆದರೆ, ಅವರನ್ನು ಅವಹೇಳನ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳರನ್ನು ಬಿಜೆಪಿಯಿಂದ ಉಚ್ಛಾಟಿಸುವ ಶಕ್ತಿಯನ್ನು ಕರ್ನಾಟಕ ಹಾಗೂ ಕೇಂದ್ರದ ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದನ್ನು ಸಹಿಸಲಾಗದ ಬಿಜೆಪಿ ನಾಯಕರು ಹಿಂದುತ್ವದ ಸೋಗಿನಲ್ಲಿ ಬಸವಣ್ಣನವರ ಆಶಯಗಳನ್ನು ಹತ್ತಿಕ್ಕಲು ಸಮುದಾಯವನ್ನು ದಿಕ್ಕುತಪ್ಪಿಸುವ ಕೆಲಸ ಮಾಡಬಾರದು. ಇಂತಹ ಘಟನೆಗಳು ಮರುಕಳಿಸಿದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.