ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಶನಿವಾರ ಮಾರ್ಚ್ 18 ರಂದು ನಾಲ್ಕು ವರ್ಷದ ಬಾಲಕಿ,ಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ನಡೆದಿದೆ.
ಆರೋಪಿಯು ಚಾಕೊಲೇಟ್ ಕೊಡಿಸುವುದಾಗಿ ಬಾಲಕಿಗೆ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ಮಾಡಿದ್ದಾನೆ ಎನ್ನಲಾಗಿದೆ. ಬರೇಲಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿ ಇತರ ಮಕ್ಕಳೊಂದಿಗೆ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಆರೋಪಿಯು ಚಾಕೊಲೇಟ್ ಕೊಡುವ ನೆಪದಲ್ಲಿ ಆಕೆಯನ್ನು ತನ್ನೊಂದಿಗೆ ಕರೆದೊಯ್ದಿದ್ದಾನೆ. 25 ವರ್ಷದ ಯುವಕ ಹುಡುಗಿಯ ಪರಿಚಯಸ್ಥ ಎಂದು ವರದಿ ತಿಳಿಸಿದ್ದು, ಬಾಲಕಿಯ ತಾಯಿ ದೂರು ದಾಖಲಿಸಿದ್ದಾರೆ.
ಆರೋಪಿ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದು, ಅತ್ಯಾಚಾರ ಸಂತ್ರಸ್ತೆಯ ತಂದೆ ಗುತ್ತಿಗೆ ಕಾರ್ಮಿಕ ಎನ್ನಲಾಗಿದೆ.
ಘಟನೆ ವೇಳೆ ಆಕೆಯ ತಾಯಿ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಮನೆಗೆ ಮರಳಿದ ಬಳಿಕ ಮಹಿಳೆಗೆ ಮಗಳು ಕಾಣೆಯಾಗಿರುವುದು ಕಂಡು ಬಂದಿದೆ. ತಕ್ಷಣ ಆಕೆಯನ್ನು ಹುಡುಕತೊಡಗಿದ್ದಾರೆ, ಹುಡುಕುತ್ತ ಹೋದಾಗ ಮಗಳ ಅಳು ಕೇಳಿಸಿತು, ತಕ್ಷಣ ತಾಯಿ ಅಲ್ಲಿಗೆ ದಾವಿಸಿದಾಗ ಪುಟ್ಟ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ತಾಯಿ ಚಕಿತರಾಗಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ.
ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ನಡೆದ ಒಂದು ದಿನದ ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.