ನ್ಯೂಸ್ ನಾಟೌಟ್: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.20 ರಂದು ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಏ,19ರಂದು ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆಶೀರ್ವಾದ ಪಡೆದರು.
ಕ್ಷೇತ್ರಕ್ಕೆ ಆಗಮಿಸಿದ ಶಿವಕುಮಾರ್ ಅವರನ್ನು ಡಿ.ಸುರೇಂದ್ರ ಕುಮಾರ್ ಸ್ವಾಗತಿಸಿದರು. ಡಿಸಿಎಂ ಜತೆ ಮಾಜಿ ಎಂ.ಎಲ್.ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಬಳಿಕ 11 ಗಂಟೆಗೆ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ಗುರುವಾಯನಕೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ, 2.30 ಗಂಟೆಗೆ ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಗೆ ಭೇಟಿ ಬಳಿಕ ರಾಘವೇಂದ್ರ ಮಠ ಲಾಯಿಲ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3 ಗಂಟೆಗೆ ಕನ್ಯಾಡಿ ಶ್ರೀರಾಮ ಮಂದಿರ ಭೇಟಿ, ಸಂಜೆ 4 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪಗಳ ಸಮುಚ್ಛಯ ಉದ್ಘಾಟನೆ ಹಾಗೂ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಪೂಜೆ ನೆರವೇರಿಸಿ, ರಾತ್ರಿ 8 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.