ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ನಿಯೋಗ ಶುಕ್ರವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದ ನಿಯೋಗ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಪತ್ರಕರ್ತರ ಗ್ರಾಮ ವಾಸ್ತವ್ಯ, ಬ್ರ್ಯಾಂಡ್ ಮಂಗಳೂರು ಸೇರಿದಂತೆ ಜಿಲ್ಲಾ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ತಿಳಿಸಿದರು. ಪತ್ರಕರ್ತರ ಕಾರ್ಯಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಪತ್ರಕರ್ತರು ಮುಂದಿರಿಸಿರುವ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ , ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಾಜಿ ಅಧ್ಯಕ್ಷರಾದ ಪಿ ಬಿ ಹರೀಶ್.ರೈ, ರವೀಂದ್ರ ಶೆಟ್ಟಿ ,ಸಂಘದ ಪದಾಧಿಕಾರಿಗಳಾದ ಪುಷ್ಪರಾಜ್ ಬಿ ಎನ್, ಆರ್.ಸಿ .ಭಟ್, ಭಾಸ್ಕರ್ ರೈ ಕಟ್ಟಾ,ಆತ್ಮ ಭೂಷಣ್,ಹರೀಶ್ ಮೊಟುಕಾನ, ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕ ಸುಖ್ ಪಾಲ್ ಪೊಳಲಿ ಉಪಸ್ಥಿತರಿದ್ದರು . ಇದೇ ವೇಳೆ ಪತ್ರಕರ್ತರ ಸಂಘದ ಪದಾಧಿಕಾರಿಗಳ ನಿಯೋಗ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.