ಹುಬ್ಬಳ್ಳಿ/ಮುಂಬೈ/ಮಂಡ್ಯ: ‘ಚೆಂಬೆಳಕಿನ ಕವಿ’ ಖ್ಯಾತಿಯ ಹಿರಿಯ ಕವಿ ಡಾ. ಚೆನ್ನವೀರ ಕಣವಿ (93) ಬುಧವಾರ ನಿಧನರಾದರು.
ಅನಾರೋಗ್ಯದಿಂದಾಗಿ ಇತ್ತೀಚೆಗೆ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಮಂಗಳವಾರ ಅವರ ಆರೋಗ್ಯದ ಪರಿಸ್ಥಿತಿ ಬಿಗಡಾಯಿಸಿತ್ತು. ರಾತ್ರಿಯಿಡೀ ವೈದ್ಯರ ನಿಗಾದಲ್ಲಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಬೆಳಿಗ್ಗೆ 9.12ಕ್ಕೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಬಪ್ಪಿ ಲಹಿರಿ ಬುಧವಾರ ಬೆಳಿಗ್ಗೆ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಪ್ಪಿ ಲಹಿರಿ ಮುಂಬೈಯ ಜುಹೂ ಪ್ರದೇಶದ ‘ಕೃತಿ ಕೇರ್’ ಆಸ್ಪತ್ರೆಯಲ್ಲಿ ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ.
ಬಪ್ಪಿ ಲಹಿರಿ ಅವರು ನಿದ್ದೆಗೆ ಸಂಬಂಧಿಸಿದ ಸಮಸ್ಯೆ ಮತ್ತು ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಸಿಕೊಂಡಿದ್ದ ಅವರನ್ನು ಫೆಬ್ರುವರಿ 15ಕ್ಕೆ ಆಸ್ಪತ್ರೆಯಿಂದ ಮನೆಗೆ ಕಳುಹಿಸಿಕೊಡಲಾಗಿತ್ತು ಎಂದು ವೈದ್ಯ ಡಾ.ದೀಪಕ್ ನಮ್ ಜೋಶಿ ತಿಳಿಸಿರುವುದಾಗಿ ‘ಎಎನ್ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಕೆರಗೋಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕ ಬಾರಿ ಶಾಸಕ, ಒಮ್ಮೆ ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರೂ ಆಗಿದ್ದ ಡಾ.ಎಚ್.ಡಿ.ಚೌಡಯ್ಯ (94) ಮಂಗಳವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದರು.
ತಾಲ್ಲೂಕಿನ ಹೊಳಲು ಗ್ರಾಮದ ಚೌಡಯ್ಯ ಅವರು ಸಹಕಾರ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. 1960ರಿಂದ 1968ರವರೆಗೆ ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ನಂತರ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.