ನ್ಯೂಸ್ ನಾಟೌಟ್: ದರ ಏರಿಕೆಗಳಿಂದ ಈಗಾಗಲೆ ಕರ್ನಾಟಕದ ಜನರು ಕಂಗೆಟ್ಟಿದ್ದಾರೆ. ಇದೀಗ, ಬಜೆಟ್ ಬಳಿಕ ರಾಜ್ಯ ಸರ್ಕಾರ ಹಾಲಿನ ದರವನ್ನೂ ಕೂಡ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಲೆ ಏರಿಕೆಗಾಗಿ ರಾಜ್ಯ ಸರ್ಕಾರದ ಮೇಲೆ ಹಾಲು ಒಕ್ಕೂಟಗಳು ಒತ್ತಡ ಹೇರುತ್ತಿದ್ದು, ಲೀಟರ್ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿವೆ ಎನ್ನಲಾಗಿದೆ.
ಕಳೆದ ತಿಂಗಳು ಪಶು ಸಂಗೋಪನಾ ಸಚಿವರು ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಕುರಿತು ಚರ್ಚೆಯಾಗಿತ್ತು. ಈ ವೇಳೆ ಹಾಲಿನ ದರ ಲೀಟರಿಗೆ 5 ರೂಪಾಯಿ ಏರಿಸಬೇಕು ಎಂದು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿದ್ದವು. ಸಂಗೋಪನೆಯ ಖರ್ಚು ವೆಚ್ಚಗಳ ಹೆಚ್ಚಳದಿಂದ ಬೆಲೆ ಏರಿಸಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಹೇಳಿದ್ದವು.
ಕಳೆದ ವರ್ಷ ಡಿಸೆಂಬರ್ನಲ್ಲಿ ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ ಕೆಎಂಎಫ್ಗೆ ಮನವಿ ಮಾಡಿದ್ದವು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದರು.