ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯಲ್ಲಿ ಆತಂಕಕಾರಿ ಘಟನೆ ಬಗ್ಗೆ ವರದಿಯಾಗಿದೆ. ಅಪ್ರಾಪ್ತ ವಯಸ್ಸಿನವರು ಗರ್ಭಿಣಿಯರಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂಬ ವಿಚಾರ ಇದೀಗ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಳೆದ 9 ತಿಂಗಳುಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ ಎನ್ನುವ ಅಂಶ ಹೊರಬಿದ್ದಿದೆ. ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ 59 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಅಪ್ರಾಪ್ತರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ಬೆಳಕಿಗೆ ಬರುವಂತೆ ಮಾಡಿದೆ.
ಇದರಲ್ಲಿ ಈಗಾಗಲೇ 14 ಬಾಲಕಿಯರಿಗೆ ಹೆರಿಗೆ ಆಗಿದೆ ಎಂಬ ಸುದ್ದಿಯೊಂದು ಹೊರಬಿದ್ದಿದ್ದು,. ಮತ್ತೊಬ್ಬಳು ಬಾಲಕಿಗೆ ಗರ್ಭಪಾತ ಆಗಿರುವುದು ಗೊತ್ತಾಗಿದೆ.ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಹೆಚ್ಚು ಅಪ್ರಾಪ್ತ ಗರ್ಭಿಣಿಯರು ಪತ್ತೆಯಾಗಿದ್ದಾರೆ. ಅದರಲ್ಲಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದಲ್ಲೇ 43 ಸಂತ್ರಸ್ತೆಯರು ಪತ್ತೆಯಾಗಿದ್ದಾರೆ. ಈ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಗೊತ್ತಾಗಿದೆ.
ತೋಟದ ಮನೆಗಳಲ್ಲೇ ಬಾಲಕಿಯರ ಮೇಲೆ ಹೆಚ್ಚು ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎನ್ನಲಾಗಿದೆ. ಇಷ್ಟೇ ಅಲ್ಲದೆ, ಬಾಲ್ಯ ವಿವಾಹ ಪ್ರಕರಣಗಳು ಕೂಡ ಹೆಚ್ಚಾಗುತ್ತಿರುವುದು ತಿಳಿದುಬಂದಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಐದು ಬಾಲ್ಯವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದು,.ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವ ಪ್ರಕರಣದಿಂದ ಜಿಲ್ಲೆಯಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ.ಇಂತಹ ಪ್ರಕರಣ ತಡೆಗಟ್ಟಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಜಿಲ್ಲಾಡಳಿತ ಚಿಂತನೆ ನಡೆಸಿದೆ ಎನ್ನಲಾಗಿದೆ.