ಉಡುಪಿ: ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಇಟ್ಟಿದ್ದ ಶಾಲೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮ ಬಂದೂಕಿನಿಂದಲೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತಪಟ್ಟವರನ್ನು ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಆದಿ ಉಡುಪಿಯ ಪ್ರೌಢಶಾಲೆಯೊಂದರಲ್ಲಿ ಇರಿಸಲಾಗಿತ್ತು. ಈ ಕೊಠಡಿಯ ಭದ್ರತಾ ನಿರ್ವಹಣೆಗಾಗಿ ರಾಜೇಶ್ ಕುಂದರ್ ರವರನ್ನು ನಿಯೋಜಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ರಾಜೇಶ್ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಜೇಶ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.