ನ್ಯೂಸ್ ನಾಟೌಟ್: ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಹಮ್ಮಿಕೊಂಡಿತ್ತು.ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಿಸಿ, ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಮಾತ್ರವಲ್ಲ ವೇದಿಕೆ ಹತ್ತಿರ ನುಗ್ಗಲು ಯತ್ನಿಸಿದ ಘಟನೆ ನಡೆಯಿತು.ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದ ವೇಳೆ ವೇದಿಕೆ ಬಳಿ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಗೋ ಬ್ಯಾಕ್ ಪಾಕಿಸ್ತಾನ್ ಎಂದು ಘೋಷಣೆ ಕೂಗುತ್ತಾ ಕಾರ್ಯಕ್ರಮದ ಕಡೆಗೆ ಕಾರ್ಯಕರ್ತೆಯರು ಬಂದಾಗ ಕೆಲಕಾಲ ಆತಂಕದ ವಾತಾವರಣವೇ ನಿರ್ಮಾಣವಾಯಿತು. ಕೂಡಲೇ ಪೊಲೀಸರು ಐವರು ಮಹಿಳೆಯರನ್ನು ವಶಕ್ಕೆ ಪಡೆದುಕೊಂಡರು.ಈ ವೇಳೆ ಭಾಷಣ ನಿಲ್ಲಿಸಿದ ಸಿದ್ದರಾಮಯ್ಯ, ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಭಾಷಣ ಮುಂದುವರಿಸಿ, ಇಂಥ ಬಿಜೆಪಿಯ ಪ್ರತಿಭಟನೆ, ಅಪಪ್ರಚಾರಕ್ಕೆ ನಾವು ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.
ಕೂಡಲೇ ವೇದಿಕೆಯಿಂದ ಕೆಳಗೆ ಇಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಹೋದರು. ಅಷ್ಟರೊಳಗೆ ಮಹಿಳಾ ಕಾರ್ಯಕರ್ತೆಯರನ್ನು ವಾಹನದಲ್ಲಿ ಕರೆದೊಯ್ಯಲಾಗಿತ್ತು. ಸಚಿವೆ , ಡಿಸಿಪಿ ರೋಹನ್ ಜಗದೀಶ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.