ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ (ಆ.18) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ.
ಸುಳ್ಯ, ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ, ಕಡಬ, ಬಂಟ್ವಾಳ, ಉಳ್ಳಾಲ, ಮಂಗಳೂರಿನಲ್ಲಿ ಶನಿವಾರ ಉತ್ತಮ ಮಳೆ ಸುರಿದಿದೆ. ಕೆಲವೆಡೆ ಬಿಟ್ಟು ಜಡಿಯಂತೆ ಸುರಿಯುತ್ತಿತ್ತು, ಬಹುತೇಕ ಕಡೆಗಳಲ್ಲಿ ದಿನವಿಡೀ ಮಳೆಯಾಗಿದೆ ಎಂದು ತಿಳಿದು ಬಂದಿದೆ.
ಈ ನಡುವೆ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಮಧ್ಯದ ಎಡಕುಮೆರಿಯಲ್ಲಿ ರೈಲ್ವೇ ಹಳಿ ಮೇಲೆ ಮಣ್ಣು ಬಂಡೆ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಕರಾವಳಿಯಲ್ಲಿ ಆ. 18ರಂದು ರೆಡ್ ಅಲರ್ಟ್ ಇರಲಿದೆ. ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆ. 17, 19 ಹಾಗೂ 20ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ. 21, 22ರಂದು ಎಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ. 16ರಿಂದ 19ರ ವರೆಗೆ ಅರಬಿ ಸಮುದ್ರದಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರಿನಲ್ಲಿ ಶನಿವಾರ ಗರಿಷ್ಠ 27.6 ಡಿ.ಸೆ. ಹಾಗೂ ಕನಿಷ್ಠ 23.1 ಡಿ.ಸೆ. ತಾಪಮಾನ ದಾಖಲಾಗಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.