ನ್ಯೂಸ್ ನಾಟೌಟ್: ಆನೆಗೊಂದಿಯ ತುಂಗಭದ್ರಾ ನದಿ ದಡದಲ್ಲಿರುವ ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಕಡಿದು ತೊಳೆಯುತ್ತಿದ್ದ ಮೂವರ ವಿರುದ್ಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆನೆಗುಂದಿ ಗ್ರಾಮದ ಹನುಮಂತ, ಫಕೀರಪ್ಪ, ಹುಲಗಪ್ಪ ಎಂಬುವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ತೊಳೆಯುತ್ತಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ, ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದ್ದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಈ ವಿಚಾರದಲ್ಲಿ ರಾಜಕೀಯ ಬೆರೆಸುವುದಿಲ್ಲ, ಅವರೂ ಬೆರೆಸಬಾರದು. ಅಪಮಾನ ಆಗಿದ್ದನ್ನು ನಾವು ಒಪ್ಪಿಕೊಳ್ಳುತ್ತೇವೆ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.
ಪ್ರಕರಣ ಸಂಬಂಧ ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹುಲಿಗೆಮ್ಮ ಮಾತನಾಡಿ, ಗೊತ್ತಿದ್ದೊ, ಗೊತ್ತಿಲ್ಲದೆಯೋ ಮಾಡಿದ್ದಾರೆ. ಅಚಾನಕ್ಕಾಗಿ ಘಟನೆ ನಡೆದಿದೆ. ಇದರಲ್ಲಿ ರಾಜಕೀಯ ಮಾಡಬಾರದು. ತಪ್ಪಾಗಿದೆ ಮುಂದೆ ಆಗದಂತೆ ನೋಡಿಕೊಳ್ಳುತ್ತೇವೆ.ಈ ಕುರಿತು ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯುತ್ತೇವೆ ಎಂದಿದ್ದರು. ಈಗ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.