ಸುಳ್ಯ: ಮಾಜಿ ಇಂಧನ ಸಚಿವ ಹಾಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು ಸುಳ್ಯದ ನ್ಯಾಯಾಲಯಕ್ಕೆ ಸಾಕ್ಷ್ಯಿಧಾರರಾಗಿ ಹಾಜರಾಗಲಿದ್ದಾರೆ. ಡಿಕೆ ಶಿವ ಕುಮಾರ್ ಇಂಧನ ಸಚಿವರಾಗಿದ್ದ ಸಂದರ್ಭದಲ್ಲಿ ಬೆಳ್ಳಾರೆಯ ಸಾಯಿ ಗಿರಿಧರ್ ನಡುವಿನ ಫೋನ್ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳಲು ಆಗಮಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಸಲ ಅವರಿಗೆ ಸಮನ್ಸ್ ಜಾರಿಗೊಳಿಸಿದರೂ ಡಿಕೆ ಆಗಮಿಸಿರಲಿಲ್ಲ. ಹೀಗಾಗಿ ಅವರ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಅವರು 11.30 ಕ್ಕೆ ಸುಳ್ಯಕ್ಕೆ ಬರುವ ನಿರೀಕ್ಷೆ ಇದೆ. ನ್ಯಾಯಾಲಯಕ್ಕೆ ಹಾಜರಾದ ಬಳಿಕ ಅವರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ನಂತರ ವಾಪಸ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.